Tuesday 19 November 2013

ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊ ನೀ ದೇಹದೊಳಗೊ, ನಿನ್ನೊಳು ದೇಹವೊ

ನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊನೀ ದೇಹದೊಳಗೊ, ನಿನ್ನೊಳು ದೇಹವೊ


ಬಯಲು ಆಲಯದೊಳಗೊ, ಆಲಯವು ಬಯಲೊಳೊಗೊ
ಬಯಲು ಆಲಯವೆರಡು ನಯನದೊಳಗೊ
ನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊ
ನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ

ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊ
ಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊ
ಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊ
ಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ

ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊ
ಕುಸುಮ ಗಂಧಗಳೆರಡು ಘ್ರಾಣದೊಳಗೊ
ಅಸಮಭವ ಕಾಗಿನೆಲೆಯಾದಿ ಕೇಶವರಾಯ
ಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೊ

ಕನಕದಾಸರ ಭಕ್ತಿ ಪ್ರೀತಿಗಳಿಂದ ಕಂಗೊಳಿಸುವ ಹಲವಾರು ಹಾಡುಗಳಲ್ಲಿ ಅತಿ ಜನಪ್ರಿಯವಾದ ಹಾಡು ‘ತಲ್ಲಣಿಸದಿರು ಕಂಡ್ಯ ತಾಳು ಮನವೆ’. ಈ ಹಾಡು ನೀಡುವ ಸಂದೇಶ ಹೃದಯದ ಕದವನ್ನು ತಟ್ಟುವಂತದ್ದು.

ತಲ್ಲಣಸಿದಿರು ಕಂಡ್ಯ ತಾಳು ಮನವೆ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ

ಬೆಟ್ಟದ ತುದಿಯಲ್ಲಿ ಹುಟ್ಟಿರುವ ವೃಕ್ಷಕ್ಕೆ
ಕಟ್ಟೆಯನ್ನು ಕಟ್ಟಿ ನೀರೆರೆದವರು ಯಾರೊ
ಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾದ ಮೇಲೆ
ಗಟ್ಯಾಗಿ ಸಲಹುವನು ಇದಕೆ ಸಂಶಯ ಬೇಡ

ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲ
ಅಡಿಗಡಿಗಡಿಗೆ ಆಹಾರವಿತ್ತವರು ಯಾರೊ
ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿ
ಬಿಡದೆ ರಕ್ಷಿಪನಿದಕೆ ಸಂದೇಹ ಬೇಡ

ಕಲ್ಲೊಳಗೆ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲ
ಅಲ್ಲಲ್ಲಿಗೆ ಆಹಾರವಿತ್ತವರು ಯಾರೊ
ಬಲ್ಲಿದನು ಕಾಗಿನೆಲೆಯಾದಿಕೇಶವರಾಯ
ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ

No comments:

Post a Comment